ಬೆಂಗಳೂರು, ಅ. 11 (DaijiworldNews/PY): ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗಡ ಸರಣಿ ಟ್ವೀಟ್ ಮಾಡಿರುವ ಅವರು, "ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ" ಎಂದಿದ್ದಾರೆ.
"ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ" ಎಂದು ತಿಳಿಸಿದ್ದಾರೆ.
"ಈ ವರ್ಷದ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ?" ಎಂದು ಪ್ರಶ್ನಿಸಿದ್ದಾರೆ.
"ಕೊರೊನ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ?" ಎಂದ ಕೇಳಿದ್ದಾರೆ.
"ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ,ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು" ಎಂದಿದ್ದಾರೆ.