ಬೆಂಗಳೂರು, ಅ. 11 (DaijiworldNews/MB) : ರಾಜ್ಯದಲ್ಲಿ ಮತ್ತೆ ಮಳೆ ತನ್ನ ಅಬ್ಬರವನ್ನು ಆರಂಭಿಸಿದ್ದು ಅಕ್ಟೋಬರ್ 10 ರ ಶನಿವಾರ ಮಧ್ಯಾಹ್ನದಿಂದ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿಯೂ ಶನಿವಾರ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಜಯನಗರ, ಬಸವನಗುಡಿ, ಎಲೆಕ್ಟ್ರಾನಿಕ್ ಸಿಟಿ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಬನಶಂಕರಿ ಮತ್ತು ಪದ್ಮನಾಭನಗರಗಳಲ್ಲಿ ಭಾರಿ ಮಳೆ ಸುರಿದು ರಸ್ತೆಗಳು ಸಣ್ಣ ಕೊಳದಂತಾಗಿದೆ. ಮಳೆನಾಡಿನ ಹೆಚ್ಚಿನ ಪ್ರದೇಶಗಳಲ್ಲಿ ಮಳೆಯಾಗಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆ ಸುರಿಯಲಿದ್ದು ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.13 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 12 ರವರೆಗೆ ಬೀದರ್, ಕಲಬುರಗಿ, ಬಾಗಲಕೋಟೆ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ದಕ್ಷಿಣ ಭಾಗಗಳಲ್ಲಿ ಅಕ್ಟೋಬರ್ 11 ರಂದು ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹೊರತಾಗಿ, ಒಡಿಶಾ, ಆಂಧ್ರಪ್ರದೇಶ, ರಾಯಲಸೀಮ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಸುರಿಯಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಈಗಾಗಲೇ ಭಾರಿ ಮಳೆಯಾಗುತ್ತಿವೆ.