ಬೆಂಗಳೂರು, ಅ. 14 (DaijiworldNews/SM): ಕೋವಿಡ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಹಲವು ಹಬ್ಬಗಳ ಮೇಲೆ ಸರಕಾರ ನಿಯಂತ್ರಣ ಹೇರಿತ್ತು. ಇದೀಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿ ಸಂದರ್ಭ ಪಟಾಕಿ ಮಾರಟಕ್ಕೂ ಕೆಲವು ನಿಬಂಧನೆಗಳನ್ನು ವಿಧಿಸಲಾಗಿದೆ.
ಯಾರೆಲ್ಲ ಪಟಾಕಿ ಮಾರಾಟ ಮಾಡುತ್ತಾರೆ ಅವರು, ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಕಡ್ಡಾಯವಾಗಿ ಪರವಾನಗಿ ಪಡೆಯಲೇಬೇಕು. ನ.1ರಿಂದ 17ರ ನಡುವಿನ ದಿನಗಳಲ್ಲಿ ಮಾತ್ರವೇ ಪಟಾಕಿಗಳನ್ನು ಮಳಿಗೆಗಳಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಇನ್ನು ಅಧಿಕೃತ ಪರವಾನಗಿ ಪಡೆಯುವ ಸಂದರ್ಭದಲ್ಲಿ ಅದರಲ್ಲಿ ನಮೂದಿಸಿರುವ ಸ್ಥಳಗಳಲ್ಲಿ ಮಾತ್ರವೇ ಪಟಾಕಿ ಮಾರಾಟ ಮಾಡಲು ಅವಕಾಶವಿರಲಿದೆ. ಇತರೆ ಪ್ರದೇಶಗಳಲ್ಲಿ ಪಟಾಕಿ ಮಾರಾಟ ಮಾಡಿದ್ದಲ್ಲಿ ಅವರ ವಿರುದ್ಧ ಸಂಬಂಧಿಸಿದ ಇಲಾಖೆ ಕ್ರಮಕೈಗೊಳ್ಳಲಿದೆ. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆ ಸ್ಥಾಪಿಸುವುದು ಕಡ್ಡಾಯವಾಗಿದೆ. ಮಳಿಗೆಗಳ ಎರಡೂ ಕಡೆಗಳಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಳಿಗೆಗಳ ನಡುವೆ 6 ಮೀಟರ್ ಅಂತರವಿರಬೇಕು ಎಂದು ಮಾರ್ಗಸೂಚಿ ತಿಳಿಸಿದೆ.
ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಇರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೆಕೆಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಜನ ದಟ್ಟನೆಗೆ ಅವಕಾಶವಿಲ್ಲ ಎಂದು ಕೂಡ ಉಲ್ಲೇಖಿಸಲಾಗಿದೆ.