ಮೈಸೂರು, ಅ. 14 (DaijiworldNews/SM): ರಾಜ್ಯದಲ್ಲಿ ಅದರಲ್ಲೂ ಮೈಸೂರು ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನೇ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ. ದಸರಾ ಸಂದರ್ಭದಲ್ಲಿ ಮೈಸೂರು ಜಿಲ್ಲೆಯಲ್ಲಿರುವ ಹಾಗೂ ಸುತ್ತಮುತ್ತಲ ಇತರ ಪ್ರಮುಖ ಪ್ರವಾಸಿ ತಾಣಗಳಿಗೆ ತೆರಳದಿರುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರವಾಸಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಈ ನಿರ್ಣಯ ಕೈಗೊಂಡಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೆ ಸೋಂಕಿನಿಂದಾಗಿ ಈಗಾಗಲೇ 900 ಮಂದಿ ಮೃತಪಟ್ಟಿದ್ದಾರೆ. ಸುಮಾರು 6800ಕ್ಕೂ ಅಧಿಕ ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದು ಸೂಕ್ತವಲ್ಲ ಎಂದು ಅವರು ತಿಳಿಸಿದ್ದಾರೆ.