ಬೆಂಗಳೂರು, ಅ. 16 (DaijiworldNews/HR): ಬೆಂಗಳೂರಿನ ಆರ್.ಎಚ್.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ (45) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಮನೀಶ್ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್, ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಬಾರ್ ಮುಂಭಾಗದಲ್ಲೇ ಮನೀಶ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ಘಟನೆ ಕುರಿತು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕೃತ್ಯಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.