ನವದೆಹಲಿ, ಅ. 16 (DaijiworldNews/MB) : ರಾಜ್ಯದಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಉಂಟಾದ ಹಾನಿ ಹಾಗೂ ರಕ್ಷಣಾ ಕಾರ್ಯಚರಣೆಗಳ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
''ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಳಿ ಮಾತನಾಡಿದೆ. ಪ್ರವಾಹದಿಂದ ಪೀಡಿತ ಕರ್ನಾಟಕದ ನಮ್ಮ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ. ರಕ್ಷಣೆ ಹಾಗೂ ಪರಿಹಾರ ಕಾರ್ಯಗಳಿಗೆ ಸಂಬಂಧಿಸಿ ಕೇಂದ್ರದಿಂದ ಸಾಧ್ಯವಾದ ಬೆಂಬಲ ನೀಡುವ ಭರವಸೆ ಅವರಿಗೆ ನೀಡಿದೆ'' ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಈ ಹಿಂದೆ ಪ್ರಧಾನಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ನೀವು ಸಹಾಯ ಮಾಡುವ ಭರವಸೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು ಪ್ರತಿ ಬಾರಿ ಕರ್ನಾಟಕವನ್ನು ಯಾಕೆ ಕಡೆಗಣಿಸಲಾಗುತ್ತದೆ ಎಂದು ಪ್ರಶ್ನಿಸಿದ್ದರು.