ಮೈಸೂರು, ಅ. 17 (DaijiworldNews/MB) : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಡಾ.ಸಿ.ಎನ್. ಮಂಜುನಾಥ್ ಅವರು ಶನಿವಾರ ಚಾಲನೆ ನೀಡಿದರು.
ಕೊರೊನಾ ಸೋಂಕಿನ ಕಾರಣದಿಂದಾಗಿ ಈ ಬಾರಿ ಸರಳವಾಗಿ ಮೈಸೂರು ದಸರಾವನ್ನು ಆಚರಿಸಲು ನಿರ್ಧಾರಿಸಲಾಗಿದ್ದು ಇಂದು ಬೆಳಗ್ಗೆ 7.45 ರ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ನವರಾತ್ರಿ ದಸರಾ ಮಹೋತ್ಸವಕ್ಕೆ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಡಾ.ಸಿ.ಎನ್. ಮಂಜುನಾಥ್ ಅವರು ಚಾಲನೆ ನೀಡಿದರು.
ಡಾ.ಸಿ.ಎನ್. ಮಂಜುನಾಥ್ ಅವರು ಮೊದಲಿಗೆ ಮುಖ್ಯಮಂತ್ರಿಗಳೊಂದಿಗೆ ಬೆಟ್ಟಕ್ಕೆ ಆಗಮಿಸಿ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.
ಕೊರೊನಾ ಕಾರಣದಿಂದಾಗಿ ಎಲ್ಲಾ ಕಾರ್ಯಕ್ರಮಗಳನ್ನು ಲೈವ್ ಮೂಲಕವೇ ನೀಡಲಾಗುತ್ತದೆ. ಹಾಗೆಯೇ ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಲಾಗಿದೆ.
ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಕಂಕಣಧಾರಿಯಾಗಿ ಖಾಸಗಿ ದರ್ಬಾರ್ ಆರಂಭಿಸಿದರು.