ಬೆಂಗಳೂರು,ಅ. 21 (DaijiworldNews/HR): ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದ ಸಂಧರ್ಭದಲ್ಲಿ ಅವರ ಮೇಲೆ ಬಿಜೆಪಿಯ ಮುನಿರತ್ನ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಲಕ್ಷ್ಮೀದೇವಿನಗರ ಬೂತ್ ನಂಬರ್ 156 ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮ ಅವರ ಪರ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗರಾದ ವೇಲು ನಾಯ್ಕರ್ ಮತ್ತು 30 ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕವನ್ನು ಹರಿದು ಹಾಕಿದ್ದು, ಬಳಿಕ ಮಾಜಿ ಸಂಸದ ಧ್ರುವ ನಾರಾಯಣ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಚಾರ ಕಾರ್ಯದ ಬಳಿ ತೆರಳಿ ವೇಲು ನಾಯ್ಕರ್ ಮತ್ತು ಸಹಚರರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿ ಮುನಿರತ್ನ ವಿರುದ್ಧ ಕಾಂಗ್ರೆಸ್ ನಾಯಕರು ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.