ಬೆಂಗಳೂರು, ಅ. 22 (DaijiworldNews/MB) : ಉಪಚುನಾವಣೆ ಬಳಿಕ ''ಬಂಡೆ ಛಿದ್ರ, ಹುಲಿಯಾ ಕಾಡಿಗೆ'' ಎಂದು ಹೇಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಲೇವಡಿ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದು ನಳಿನ್ ಅವರನ್ನು ''ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ನಳಿನ್ ಎಂಬ ಪೋಕರಿ'' ಎಂದು ಹೇಳಿದ್ದಾರೆ.
ನಳಿನ್ ವಿರುದ್ದ ಕಿಡಿಕಾರಿ ಸರಣಿ ಟ್ವೀಟ್ ಮಾಡಿರುವ ಅವರು, ''ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ'' ಎಂದು ಟಾಂಗ್ ನೀಡಿದ್ದಾರೆ.
''ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ'' ಎಂದು ಲೇವಡಿ ಮಾಡಿದ್ದಾರೆ.
''ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ'' ಎಂದು ಸಿಡಿಮಿಡಿಗೊಂಡಿದ್ದಾರೆ.
''ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ 'ಸಂತೋಷ'ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ'' ಎಂದು ಟೀಕಿಸಿದ್ದಾರೆ.
''ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ'' ಎಂದು ತಿರುಗೇಟು ನೀಡಿದ್ದಾರೆ.
''ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು'' ಎಂದು ವ್ಯಂಗ್ಯ ಮಾಡಿದ್ದಾರೆ.
''ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಮುಗಿದ ಬಳಿಕ ಬಂಡೆ ಛಿದ್ರವಾಗುತ್ತದೆ, ಹುಲಿಯಾ ಕಾಡಿಗೆ ಹೋಗಬೇಕಾಗುತ್ತದೆ'' ಎಂದು ನಳಿನ್ ಕುಮಾರ್ ಕಟೀಲ್ ಅವರು ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದ್ದರು.