ಬೆಂಗಳೂರು, ಅ. 24 (DaijiworldNews/MB) : ಬೆಂಗಳೂರಿನಾದ್ಯಂತ ಶುಕ್ರವಾರ ಭಾರೀ ಮಳೆಯಾಗಿದೆ. ಹಲವು ಕಡೆಗಳಲ್ಲಿ ಭಾರೀ ಹಾನಿ ಉಂಟಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
ರಾಜರಾಜೇಶ್ವರಿ ನಗರದ ದತ್ತಾತ್ರೇಯ ಲೇಔಟ್ ಬಳಿ ಚಂಡಮಾರುತದಿಂದಾಗಿ ನೀರಿನ ಚರಂಡಿಯ ಗೋಡೆಯ ಒಂದು ಭಾಗ ಕುಸಿದಿದ್ದು, ಇದರಿಂದಾಗಿ ಈ ಪ್ರದೇಶದಲ್ಲಿ ಜಲಾವೃತವಾಗಿದೆ. ಚರಂಡಿಯ ನೀರು ಮನೆಗಳಿಗೆ ನುಗ್ಗುತ್ತಿದೆ. ಹಲವು ಜನರು ತಮ್ಮ ಮನೆಯಲ್ಲಿರುವ ಉಪಕರಣಗಳು, ದಿನಸಿ ಸಾಮಾನುಗಳು, ಬಟ್ಟೆಗಳನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲು ಹೆಣಗಾಡುತ್ತಿದ್ದು ತಮ್ಮ ಮನೆಯಿಂದ ನೀರನ್ನು ಹೊರ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.
ಇಷ್ಟೇ ಅಲ್ಲದೇ ವಾಹನಗಳ ಸಂಚಾರಕ್ಕೂ ಕೂಡಾ ತೊಡಕು ಉಂಟಾಗಿದ್ದು ಜಿಲ್ಲೆಯ ಪ್ರಮುಖ ಜಂಕ್ಷನ್ಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ ಅವರು ಕೇಂದ್ರ ನಿಯಂತ್ರಣ ಕೊಠಡಿಯ ಮೂಲಕ ಪರಿಹಾರ ಕಾರ್ಯಗಳ ಬಗ್ಗೆ ನಿಗಾ ವಹಿಸಿದ್ದಾರೆ. ಹಾಗೆಯೇ ಕಂದಾಯ ಸಚಿವ ಆರ್.ಅಶೋಕ ಅವರು ಕೂಡಾ ಪರಿಹಾರ ಕಾರ್ಯಗಳ ಮೇಲೆ ನಿಗಾ ವಹಿಸುತ್ತಿದ್ದಾರೆ.
ಏತನ್ಮಧ್ಯೆ, ಭಾರತ ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳವರೆಗೆ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.