ಕಾಸರಗೋಡು, ಅ. 26 (DaijiworldNews/SM): ಹೊರರಾಜ್ಯಗಳಿಂದ ಕೇರಳಕ್ಕೆ ಆಗಮಿಸುವವರಿಗೆ ಇನ್ನು ಮುಂದೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ತಲಪಾಡಿ ಸೇರಿದಂತೆ ರಾಜ್ಯದ ಗಡಿ ಪ್ರದೇಶಗಳಲ್ಲಿ ತಪಾಸಣೆ ಚುರುಕುಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ಸರಕಾರ ನಿಯಂತ್ರಣ ಬಿಗಿಗೊಳಿಸಲು ತೀರ್ಮಾನಿಸಿದೆ ಎಂದು ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ತಿಳಿಸಿದ್ದಾರೆ.
ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ಸೋಂಕಿಗೆ ಕಡಿವಾಣ ಹಾಕಲು ಸಾಧ್ಯವಾಗಲಿದೆ. ಕೋವಿಡ್ ನಿಂದ ಗುಣಮುಖರಾದವರು, ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ಇವರಿಗೆ ಚಿಕಿತ್ಸೆ ಸೌಲಭ್ಯ ಒದಗಿಸಲು ಕ್ಲಿನಿಕ್ ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಹೊರರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಿತ್ತು. ಆದರೆ ಅನ್ ಲಾಕ್ ಜಾರಿ ಬಂದ ಬಳಿಕ ನಿಯಂತ್ರಣ ಸಡಿಲಗೊಳಿಸಿತ್ತು. ಆದರೆ ಈಗ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಿಯಂತ್ರಣ ಜಾರಿಗೆ ತರಲಾಗುತ್ತಿದ್ದು, ಹೊರ ರಾಜ್ಯಗಳಿಂದ ಬರುವವರು ಕೋವಿಡ್ ಪೋರ್ಟಲ್ ನಲ್ಲಿ ನೋಂದಣಿ ಮಾಡಬೇಕು.
ಇದಲ್ಲದೆ ನೆಗೆಟಿವ್ ಸರ್ಟಿಕೇಟ್ ಕಡ್ಡಾಯಗೊಳಿಸಲಾಗಿದೆ. ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಗೆ ಅರೋಗ್ಯ ಇಲಾಖೆ, ಪೊಲೀಸ್, ಕಂದಾಯ ಇಲಾಖೆ ಮೊದಲಾದವುಗಳ ಸೇವೆಯನ್ನು ಬಳಸಲು ಈಗಾಗಲೇ ಜಿಲ್ಲಾಡಳಿತ ತೀರ್ಮಾನಿಸಿದೆ.