ಬೆಂಗಳೂರು, ಅ. 27 (DaijiworldNews/HR): ಕೊರೊನಾ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿದ್ದ ವಿವಿ ಪುರಂನ ಪೊಬ್ಬತಿ ಹೆರಿಗೆ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಮತ್ತು ಆಶಾ ಕಾರ್ಯಕರ್ತೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ವಿವಿ ಪುರಂನ ಪೊಬ್ಬತಿ ಹೆರಿಗೆ ಆಸ್ಪತ್ರೆಯಲ್ಲಿ ಕೊರೊನಾ ವರದಿಯಲ್ಲಿ ನೆಗೆಟಿವ್ ಎಂದು ಸುಳ್ಳು ವರದಿ ನೀಡುತ್ತಿರುವುದು ಮಾಧ್ಯಮದ ವರದಿ ಮೂಲಕ ಗಮನಕ್ಕೆ ಬಂದಿದ್ದು, ಕೂಡಲೇ ಅಲ್ಲಿನ ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳ ತಂಡ ಆಸ್ಪತ್ರೆಗೆ ತೆರಳಿ ಪರಿಶೀಲಿಸುವಂತೆ ಸೂಚಿಸಿದೆ ಎಂದರು.
ಇನ್ನು ಕೊರೊನಾ ವರದಿ ನೆಗೆಟಿವ್ ಎಂದು ಸುಳ್ಳು ವರದಿ ನೀಡುತ್ತಿದ್ದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನೀಷಿಯನ್ ಹಾಗೂ ಆಶಾ ಕಾರ್ಯಕರ್ತೆ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಅಂತೆಯೇ ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಹಾಗೂ ಬಿಬಿಎಂಪಿಯಲ್ಲಿರುವ ನ್ಯೂನತೆ ಸರಿಪಡಿಸಲು ಕಠಿಣ ಕಾನೂನು ತರಲಾಗುವುದು. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.