ಬೆಂಗಳೂರು, ಅ.31 (DaijiworldNews/PY): "ಉಪಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಎರಡೂ ಕ್ಷೇತ್ರಗಳ ಮತ ಎಣಿಕೆ ಮುಗಿದು, ನಂತರ ಫಲಿತಾಂಶ ಪ್ರಕಟವಾದ ಬಳಿಕ ನಾನು ದೆಹಲಿಗೆ ತೆರಳಲಿದ್ದೇನೆ. ದೆಹಲಿಯಿಂದ ವಾಪಾಸ್ಸಾದ ಬಳಿಕ ಸಂಪುಟ ವಿಸ್ತರಣೆಯ ಕಾರ್ಯ ಕೈಗೊಳ್ಳಲಿದ್ದೇನೆ" ಎಂದು ತಿಳಿಸಿದ್ದಾರೆ.
"ಚುನಾವಣೆಯ ನಂತರ ಖಂಡಿತವಾಗಿಯೂ ರಾಜ್ಯ ಸರ್ಕಾರದ ನಾಯಕತ್ವದಲ್ಲಿ ಬದಲಾವಣೆಯಾಗಲಿದೆ. ಶಿರಾ ಹಾಗೂ ಆರ್.ಆರ್ ನಗರ ಕ್ಷೇತ್ರದಲ್ಲಿ ನಾವು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ" ಎಂದಿದ್ದಾರೆ.
"ಕಾಂಗ್ರೆಸಿಗರು ವೈಯುಕ್ತಿಕವಾಗಿ ಟೀಕೆ ಮಾಡುತ್ತಿದ್ದಾರೆ. ನಾನು ಇಂದಿನವರೆಗೂ ಒಂದು ಶಬ್ದವನ್ನು ಹೇಳಿಲ್ಲ. ಚುನಾವಣೆ ಮುಗಿಯುವ ತನಕ ನಾನು ಯಾರಿಗೂ ಕೂಡಾ ಟೀಕೆ ಮಾಡುವುದಿಲ್ಲ" ಎಂದು ಹೇಳಿದ್ದಾರೆ.
"ಉಪಚುನಾವಣೆಯ ಪ್ರಚಾರಕ್ಕೆ ತೆರಳುವುದಿಲ್ಲ ಎನ್ನುವ ತೀರ್ಮಾನ ಮಾಡಲಾಗಿತ್ತು. ಆದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕರಾದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಹಾಗಾಗಿ ನಾನು ಚುನಾವಣಾ ಪ್ರಚಾರಕ್ಕೆ ತೆರಳದಿದ್ದರೆ ತಪ್ಪಾದ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಶಿರಾ ಹಾಗೂ ಆರ್.ಆರ್ ನಗರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತೇನೆ" ಎಂದಿದ್ದಾರೆ.