ನವದೆಹಲಿ, ಜ. 18 (DaijiworldNews/SM): ಕಳೆದ ತಿಂಗಳು ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ತೆರೆದ ಘಟನೆಯ ಬಗ್ಗೆ ಸ್ವತಃ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರೇ ವರದಿ ಮಾಡಿ ಕ್ಷಮೆಯಾಚಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ಹೇಳಿದ್ದಾರೆ.
ಕಳೆದ ವರ್ಷ ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿಯ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಪಕ್ಷ ಕಾಂಗ್ರೆಸ್ನಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಪ್ರಯಾಣಿಕರೊಬ್ಬರು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಿದ ನಂತರ ಆಕಸ್ಮಿಕವಾಗಿ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದರು ಎಂದು ಇಂಡಿಗೋ ಮಂಗಳವಾರ ಹೇಳಿತ್ತು. ಆದರೆ ಆ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿರಲಿಲ್ಲ.
ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ಸಚಿವ ಸಿಂಧಿಯಾ ಅವರು, ಇದು ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ಆಗುವ ಮುನ್ನ ನಡೆದಿದೆ ಎಂದು ಹೇಳಿದ್ದಾರೆ.