ಕಲಬುರ್ಗಿ, ಜ 23( DaijiworldNews/MS): ತೊಗರಿ ಬೆಳಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಇಂದು ಸಂಜೆ 4 ಗಂಟೆಗೆ ಸಭೆ ಕರೆದಿದ್ದು, ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಇಂದು ಸಂಜೆ ಘೋಷಣೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ನಾಶವಾಗಿದ್ದು, ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದರು.
ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ.ಗಳ ಡಿಪಿಆರ್ ಸಿದ್ದ:
ವಿಠಲ ಹೇರೂರ ಅವರ ಮೂರ್ತಿಯ ಅನಾವರಣ ಹಾಗೂ ಗಾಣಗಾ ಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದು, ಸುಮಾರು 60 ಕೋಟಿ ಗಿಂತ ಹೆಚ್ಚು ಅನುದಾನದ ಅಗತ್ಯವಿದೆ. ಕಾಶಿ ವಿಶ್ವನಾಥ, ಉಜ್ಜಯನಿಯ ಕಾಳಹಸ್ತಿಯಲ್ಲಿ ನಿರ್ಮಿಸಿರುವಂತೆ ಕಾರಿಡಾರ್ ನಿರ್ಮಿಸಬೇಕು ಎಂದು 67 ಕೋಟಿ ರೂ.ಗಳ ಡಿಪಿಆರ್ ಸಿದ್ದ ಮಾಡಿದ್ದಾರೆ.ಬರುವ ಬಜೆಟ್ ನಲ್ಲಿ ಸರ್ಕಾರ ಕಾರಿಡಾರ್ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.