ಬೆಂಗಳೂರು, ಜ 31 (DaijiworldNews/DB): ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿಯಲ್ಲಿ ಸಿದ್ದತೆಗಳು ಶುರುವಾಗಿದೆ. ಒಂದು ತಿಂಗಳ ಅವಧಿಯಲ್ಲಿ ಇದು ರಾಜ್ಯಕ್ಕೆ ಪ್ರಧಾನಿ ಮೋದಿಯವರ ಎರಡನೇ ಭೇಟಿಯಾಗಿದೆ.
ಅಂದು ದಿನವಿಡೀ ಪ್ರಧಾನಿ ರಾಜ್ಯದಲ್ಲೇ ಇರಲಿದ್ದಾರೆ. ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್ನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ., (ಎಚ್ಎಎಲ್) ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ. ತಿಪಟೂರಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಜನವರಿ 12ರಂದು ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.