ಬೆಂಗಳೂರು, ಜ 31 (DaijiworldNews/DB): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಹೋದರಿಯ ಪತಿ ಹಾಗೂ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ಸಿ.ಪಿ. ಶರತ್ಚಂದ್ರ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪಕ್ಷದ ಪ್ರಚಾರ ಹಾಗೂ ಜನ ಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗೂ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಭಾಸ್ಕರ್ ರಾವ್ ಅವರು ಶರತ್ ಚಂದ್ರ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಶರತ್ಚಂದ್ರ ಎಎಪಿಗೆ ಸೇರಿರುವುದರಿಂದ ಪಕ್ಷದ ಬಲ ಹೆಚ್ಚಾಗಲಿದೆ. ರಾಷ್ಟ್ರೀಯ ಪಕ್ಷಗಳ ಭ್ರಷ್ಟಾಚಾರ, ಅಭಿವೃದ್ದಿ ವಿರೋಧಿ ನೀತಿಗಳಿಂದಾಗಿ ಅದರಲ್ಲಿದ್ದ ಪ್ರಾಮಾಣಿಕ ನಾಯಕರು ಮತ್ತು ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಇದಕ್ಕಾಗಿ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದರು.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಸಿ.ಪಿ. ಶರತ್ಚಂದ್ರ, ಎಎಪಿಯು ದೆಹಲಿ ಮತ್ತು ಪಂಜಾಬ್ನಲ್ಲಿ ಉತ್ತಮ ಆಡಳಿತ ನಡೆಸುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ತಂದಿರುವ ಬದಲಾವಣೆಗಳು ಇಡೀ ದೇಶಕ್ಕೇ ಮಾದರಿಯಾಗಿದೆ. ನಮ್ಮ ರಾಜ್ಯದಲ್ಲಿಯೂ ಅಂತಹ ಕ್ರಾಂತಿಕಾರಕ ಬದಲಾವಣೆಗಳಾಗುವ ಮೂಲಕ ದಕ್ಷ, ಪ್ರಾಮಾಣಿಕ ಜನಸೇವೆಗೆ ಸರ್ಕಾರಗಳು ಸಾಕ್ಷಿಯಾಗಬೇಕು ಎಂಬ ಉದ್ದೇಶದಿಂದ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು.