ನವದೆಹಲಿ, ಫೆ 01 (DaijiworldNews/DB): ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ದೇಶದಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2023-24ನೇ ಸಾಲಿನ ಬಜೆಟ್ನಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗುವುದು. ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ದೇಶದಲ್ಲಿ ಹೊಸದಾಗಿ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಇದರಿಂದ ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ವೈದ್ಯಕೀಯ ಕ್ಷೇತ್ರದಲ್ಲಿ ಹೊಸತನಗಳನ್ನು ಹೆಚ್ಚು ಅಭಿವೃದ್ದಿ ಸಾಧಿಸುವ ಮೂಲಕ ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ನೀಡುವುದು ಸರ್ಕಾರದ ಉದ್ದೇಶ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಐಸಿಎಂಆರ್ ಲ್ಯಾಬ್ಗಳನ್ನು ಸ್ಥಾಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಇನ್ನು ಸಾಂಕ್ರಾಮಿಕ ರೋಗಗಳ ಬಗ್ಗೆ ಜನ ಸಾಮಾನ್ಯರು ತಿಳಿದುಕೊಳ್ಳುವುದು ಮತ್ತು ಮುನ್ನೆಚ್ಚರಿಕೆ ವಹಿಸುವುದು ಅತೀ ಅಗತ್ಯ. ಇದಕ್ಕಾಗಿ ಎಲ್ಲಾ ಸಾಂಕ್ರಾಮಿಕ ರೋಗಗಳ ಬಗೆಗಿನ ಮಾಹಿತಿಯನ್ನು ಪ್ರಾದೇಶಿಕ ಭಾಷೆಗಳಲ್ಲೇ ನೀಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಗ್ರಂಥಾಲಯಗಳಲ್ಲಿಯೂ ರೋಗಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದವರು ವಿವರಿಸಿದರು.