ನವದೆಹಲಿ,ಫೆ 01 (DaijiworldNews/HR): 2023-2024 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮಧ್ಯ ಕರ್ನಾಟಕದ ಕೃಷಿಗೆ ವರದಾನವಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ 5300 ಕೋಟಿ ರೂ. ಪ್ರಕಟಿಸಲಾಗಿದೆ.
ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ.ಎಂ.ಸಿ. ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ.
ಇನ್ನು ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತಾರಾಮನ್ 5,300 ಕೋಟಿ ಅನುದಾನ ಘೋಷಿಸಿದ್ದು, ಈ ವೇಳೆ ಪ್ರತಿಪಕ್ಷಗಳಿಂದ ಉದ್ಗಾರ ತೇಲಿಬಂತು.
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರಾವರಿ ಅಗತ್ಯವನ್ನು ಪೂರೈಸುವ ಮಹತ್ವದ ಯೋಜನೆ ಇದಾಗಿದೆ.
ಈ ಕುರಿತು ಸಂತೋಷ ವ್ಯಕ್ತಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.