ನವದೆಹಲಿ, ಫೆ 03 (DaijiworldNews/DB): ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಸಂಬಂಧಿಸಿದಂತೆ ಬಿಬಿಸಿ ತಯಾರಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸರ್ಕಾರ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಇಂದು ಸುಪ್ರೀಂಕೋರ್ಟ್ ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿತ್ತು. ಬಳಿಕ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿರುವ ಸುಪ್ರೀಂಕೋರ್ಟ್ ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಸೂಚಿಸಿದೆ. ಅಲ್ಲದೆ ಈ ಕುರಿತ ವಿಚಾರಣೆಯನ್ನು ಏಪ್ರಿಲ್ಗೆ ಮುಂದೂಡಿದೆ.
ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಹಿರಿಯ ಪತ್ರಕರ್ತ ಎನ್. ರಾಮ್, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿ ಈ ಆದೇಶ ನೀಡಿತು.
'ಇಂಡಿಯಾ: ದಿ ಮೋದಿ ಕ್ವೆಶ್ಶನ್' ಎಂಬ ಶೀರ್ಷಿಕೆಯಡಿ ಬಿಬಿಸಿಯು ಸಾಕ್ಷ್ಯಚಿತ್ರ ತಯಾರಿಸಿದ್ದು, ಈ ಚಿತ್ರ ಎರಡು ಭಾಗಗಳನ್ನೊಳಗೊಂಡಿದೆ. ಸಾಕ್ಷ್ಯಚಿತ್ರ ಬಿಡುಗಡೆಯಾದ ದಿನದಿಂದಲೇ ಇದು ವಿವಾದಕ್ಕೆ ಕಾರಣವಾಗಿತ್ತು.