ಬೆಂಗಳೂರು, ಫೆ 06 (DaijiworldNews/HR): ಇಂಧನ ಕ್ಷೇತ್ರವು 21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದು ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ. ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಇಂದು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದಾಗಿದೆ ಎಂದರು.
ಇನ್ನು ಭಾರತದಲ್ಲಿ ಇಂದು ಕೋಟ್ಯಂತರ ಜನರ ಬದುಕಿನ ರೀತಿ ಬದಲಾಗಿದ್ದು, ಹಳ್ಳಿಹಳ್ಳಿಗಳಲ್ಲಿ ಇಂಟರ್ನೆಟ್ ತಲುಪಿದೆ. ಇದಕ್ಕಾಗಿ 5 ಲಕ್ಷ ಕಿಮೀಗೂ ಹೆಚ್ಚು ಉದ್ದದಷ್ಟು ಆಪ್ಟಿಕಲ್ ಫೈಬರ್ ಅಳವಡಿಸಲಾಗಿದೆ ಎಂದಿದ್ದಾರೆ.
ಭಾರತದಲ್ಲಿ ಈಗ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದ್ದು, ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.