ನವದೆಹಲಿ, ಫೆ 15 (DaijiworldNews/DB): ಬಿಬಿಸಿ ಮಾಧ್ಯಮ ಸಂಸ್ಥೆಯ ಮುಂಬೈ ಮತ್ತು ದೆಹಲಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯನ್ನು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹಿತ ವಿವಿಧ ರಾಜಕೀಯ ನಾಯಕರು ಖಂಡಿಸಿದ್ದಾರೆ.
ದಾಳಿ ಖಂಡಿಸಿ ಬುಧವಾರ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್, ಬಿಬಿಸಿ ಕಚೇರಿ ಮೇಲೆ ದಾಳಿ ಮಾಡಿರುವುದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನದ ಭಾಗವಾಗಿದೆ ಎಂದು ಕಿಡಿ ಕಾರಿದ್ದಾರೆ.
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮ ಆದರೆ ಅದರ ಸ್ವಾತಂತ್ರ್ಯವನ್ನು ಹತ್ತಿಕ್ಕಿ ಜನರ ಧ್ವನಿಯನ್ನು ದಮನಿಸುವ ಪ್ರಯತ್ನ ಆಗುತ್ತಿದೆ. ಬಿಜೆಪಿ ವಿರುದ್ದ ಮಾತನಾಡಿದರೆ ಸಿಬಿಐ, ಇಡಿ, ಐಟಿಯನ್ನು ಛೂ ಬಿಟ್ಟು ಧ್ವನಿಯನ್ನೇ ಉಡುಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬಿಜೆಪಿ ಹಾಳು ಮಾಡುತ್ತಿದೆ. ದೇಶವನ್ನು ಅಡಿಯಾಳಾಗಿಸುವ ಯೋಜನೆ ಇವರದೇ ಎಂದು ಇದೇ ವೇಳೆ ಕೇಜ್ರೀವಾಲ್ ಪ್ರಶ್ನಿಸಿದ್ದಾರೆ.
ಇನ್ನು ಇದೇ ವಿಚಾರವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಬಿಸಿ ಮೇಲೆ ನಡೆದ ಐಟಿ ದಾಳಿ ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಭಾಗವಾಗಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ದಮನಿಸುವ ಕೆಲಸ ನಡೆಯುತ್ತಿದೆ ಎಂದು ಹರಿಹಾಯ್ದಿದ್ದಾರೆ.
ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು. ಇದಾದ ಕೆಲವೇ ದಿನಗಳ ನಂತರ ಮಂಗಳವಾರ ಆದಾಯ ತೆರಿಗೆ ಇಲಾಖೆಯು ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಈ ದಾಳಿ ನಡೆದಿದೆ.