ರಾಮನಗರ, ಫೆ. 19 (DaijiworldNews/SM): ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ "ಗೋ ಬ್ಯಾಕ್ ಆಶೋಕ್" ಅಭಿಯಾನ ನಡೆದಿತ್ತು. ಇದರ ಬೆನ್ನಲೇ ಇದೀಗ ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, "ಅಶ್ವತ್ಥ್ ನಾರಾಯಣ್ ಗೋ ಬ್ಯಾಕ್" ಅಭಿಯಾನ ಪ್ರಾರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಗೋ ಬ್ಯಾಕ್ ಅಭಿಯಾನ ಪ್ರಾರಂಭದಿಂದಾಗಿ ಬಿಜೆಪಿ ಪಾಳಯದ ಒಳ ಜಗಳ ಬೀದಿಗೆ ಬಂದಿದೆ. ಒಂದು ಕಡೆ ಬಿಜೆಪಿ ವರಿಷ್ಠರು ಹಳೆ ಮೈಸೂರು ಪ್ರಾಂತ್ಯದಲ್ಲಿ ಕಮಲ ಅರಳಿಸುವ ಪ್ರಯತ್ನದಲ್ಲಿದರೆ, ಜಿಲ್ಲೆಯ ಬಿಜೆಪಿ ಪಾಳಯದಲ್ಲಿ 23ರ ಸಾರ್ವತ್ರಿಕ ಚುನಾವಣೆಯ ಟಿಕೆಟ್ ಪಡೆಯುವ ನಿಟ್ಟಿನಲ್ಲಿ ಗುಂಪುಗಾರಿಕೆ ಪ್ರಾರಂಭವಾಗಿದೆ. ಇದರಿಂದ ಜಿಲ್ಲೆಯಲ್ಲಿ ಕಮಲ ಅರಳಿಸುವ ವರಿಷ್ಟರ ಆಸೆಗೆ ಭಂಗ ಬಂದಂತಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ವಿರುದ್ಧ ಬಿಜೆಪಿ ಮುಖಂಡರು "ಗೋ ಬ್ಯಾಕ್ ಅಶ್ವತ್ಥ್ ನಾರಾಯಣ್" ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಇಂದು ನಗರದ ಪಂಚಮುಖಿ ಆಂಜನೇಯ ದೇವಸ್ಥಾನ ಅವರಣದಲ್ಲಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್, ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವ ಕೆಲಸ ಮಾಡದೇ ಕೇವಲ ಒಬ್ಬ ವ್ಯಕ್ತಿಗೆ ಮಣೆ ಹಾಕುವ ಕೆಲಸವನ್ನು ಮಾಡಿದ್ದಾರೆ. ಈ ಮೂಲಕ ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರನ್ನು ಮೂಲೆಗುಂಪು ಮಾಡುವ ಮೂಲಕ ಗುಂಪುಗಾರಿಕೆ ಹುಟ್ಟು ಹಾಕಿದ್ದಾರೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆರೋಪಿಸಿದರು.