ಬೆಂಗಳೂರು ಫೆ 25 (DaijiworldNews/HR): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲಿದ್ದ ಆದಾಯ ಮೀರಿದ ಅಕ್ರಮ ಆಸ್ತಿಗಳಿಕೆ ಪ್ರಕರಣ ಮತ್ತೆ ಮರು ಜೀವವಾಗಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಸಿಬಿಐ ಹೈಕೋರ್ಟ್ ಮೊರೆ ಹೋಗಿದೆ.
ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿಗೆ ತಡೆ ಆದೇಶ ತೆರವು ಕೋರಿ ಸಿಬಿಐ ಪರ ವಕೀಲರು ಮನವಿ ಸಲ್ಲಿಸಿದ್ದು, ತನಿಖೆಯ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಆದರೆ, ತನಿಖೆಯ ಪ್ರಗತಿ ವರದಿ ಸ್ವೀಕರಿಸಲು ನಿರಾಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿದೆ.
ಇನ್ನು ಡಿಕೆಶಿಯ ವಿರುದ್ದ ಸಿಬಿಐ ಎಫ್ಐಆರ್ ದಾಖಲು ಮಾಡಿ ಈಗಾಗಲೇ ಎರಡು ವರ್ಷಗಳಾಗಿವೆ. ಆದರೆ ಅರ್ಜಿದಾರರು ಈಗ ಹೈಕೋರ್ಟ್ನಲ್ಲಿ ಆದೇಶ ಪ್ರಶ್ನಿಸುತ್ತಿದ್ದಾರೆ. ಅರ್ಜಿದಾರ ಆರೋಪಿ ಡಿ.ಕೆ.ಶಿವಕುಮಾರ್ ಸಂಬಂಧಿ ಶಶಿಕುಮಾರ್ ಶಿವಣ್ಣ ಈ ಹಿಂದೆ ಇದೇ ರೀತಿಯಲ್ಲಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದ್ದನ್ನು ಪ್ರಶ್ನಿಸಿದ್ದರು. ಆದರೆ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ, ಈ ಅರ್ಜಿಯನ್ನು 2022ರ ಜುಲೈ 22ರಂದು ವಜಾಗೊಳಿಸಿತ್ತು. ನಂತರ ವಿಭಾಗೀಯ ನ್ಯಾಯಪೀಠ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಎತ್ತಿ ಹಿಡಿದಿತ್ತು ಎಂದು ಸಿಬಿಐ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.