ಬೆಂಗಳೂರು, ಮಾ 01 (DaijiworldNews/DB): ಸರ್ಕಾರಿ ನೌಕರರಿಗೆ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸರ್ಕಾರಿ ನೌಕರರ ಸಂಘ ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಈ ಸಂಬಂಧ ಮಧ್ಯಂತರ ಆದೇಶ ಹೊರಡಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದರು.
ಇನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಮಾತನಾಡಿ, ಸರ್ಕಾರದ ಆದೇಶ ಒಪ್ಪಲು ಸಾಧ್ಯವಿಲ್ಲ. ಅಧಿಕೃತ ಆದೇಶದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ಹಮ್ಮಿಕೊಂಡಿದ್ದಾರೆ. ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ಆಗಿದ್ದು, ಸರ್ಕಾರಿ ಅಧಿಕಾರಿಗಳು ಸೇವೆಗೆ ಗೈರಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.