ಮಾ 01 (DaijiworldNews/MS): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆದುಕೊಂಡ ರೀತಿ ರಾಜಕೀಯ ಆಯಾಮದಲ್ಲಿ ನಾನಾ ರೀತಿಯ ಚರ್ಚೆಯನ್ನು ಹುಟ್ಟು ಹಾಕಿದೆ. ಇದರ ಬೆನ್ನಲ್ಲೇ ಯಡಿಯೂರಪ್ಪ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಟಾಂಗ್ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಡಿಕೆಶಿ ಇದುವರೆಗೆ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಹೇಳುತ್ತಿದ್ದ ಬಿಜೆಪಿ ನಾಯಕರು ಇದೀಗ ಯೂ ಟರ್ನ್ ತೆಗೆದುಕೊಂಡಿದ್ದು, ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಚುನಾವಣೆ ಎನ್ನುತ್ತಿದ್ದಾರೆ. ಹೀಗಾಗಿ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸವಾಲ್ ಹಾಕಿದ್ದಾರೆ.
ಇದೇ ವೇಳೆ ಪ್ರಧಾನಿ ಕರ್ನಾಟಕದ ಭೇಟಿಯ ಕುರಿತು ಟೀಕಿಸಿದ ಡಿಕೆಶಿ, "ಕೋವಿಡ್, ಪ್ರವಾಹ ಪರಿಸ್ಥಿತಿಯಲ್ಲಿ ರಾಜ್ಯ ಜನರು, ರೈತರ ಕಷ್ಟವನ್ನು ಕೇಳಲು ರಾಜ್ಯಕ್ಕೆ ಬರದ ಪ್ರಧಾನಿ ಮೋದಿ, ಇಂದು ಚುನಾವಣೆ ಪ್ರಚಾರಕ್ಕಾಗಿ ಪದೇ ಪದೇ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.
1972 ರಿಂದ ಇಲ್ಲಿವರೆಗೆ ಮಲ್ಲಿಕಾರ್ಜುನ ಖರ್ಗೆ ಪಕ್ಷದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದ ಅಡಿ ಕಾರ್ಯ ನಿರ್ವಹಿಸುತ್ತಿದ್ದು, ಒಬ್ಬ ದಲಿತ ನಾಯಕನ ವಿರುದ್ಧ ಹೇಳಿಕೆ ನೀಡುವುದು ಅಕ್ಷಮ್ಯ ಅಪರಾಧ ಎಂದು ತಿರುಗೇಟು ನೀಡಿದ್ದಾರೆ.