ಬೆಂಗಳೂರು, ಮಾ 04 (DaijiworldNews/DB): ರಾಜ್ಯದಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ನಡೆಯಿತು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ತೆರಳಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಅಣಿಯಾದರು. ಈ ವೇಳೆ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಮನೆಗೆ ಲೋಕಾಯುಕ್ತ ದಾಳಿ ವೇಳೆ ಎಂಟು ಕೋಟಿ ರೂ. ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಸಿಎಂ ರಾಜೀನಾಮೆಗೆ ಒತ್ತಾಯಿಸಿದರು.
ಬಿಜೆಪಿ ಸರ್ಕಾರವು 40% ಕಮಿಷನ್ ದಂಧೆಯಲ್ಲಿ ತೊಡಗಿರುವುದು ರಾಜ್ಯದ ಜನರ ಮುಂದೆ ಬಹಿರಂಗಗೊಂಡಿದೆ. ಇದೀಗ ಮತ್ತೊಂದು ಭ್ರಷ್ಟಾಚಾರ ಪ್ರಕರಣ ನಡೆದಿದೆ. ಭ್ರಷ್ಟಾಚಾರ ಆರೋಪವನ್ನು ಬಿಜೆಪಿ ಸರ್ಕಾರ ಹೊತ್ತಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ಕೃಷ್ಣ ಬೈರೇಗೌಡ, ರಾಮಲಿಂಗ ರೆಡ್ಡಿ, ಕೆ ಜೆ ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸಹಿತ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.