ಬೆಂಗಳೂರು, ಮಾ 07 (DaijiworldNews/DB): ಕೆಲವು ಹಾಲಿ ಶಾಸಕರು ಸಹಿತ ಬಿಜೆಪಿಯ ಸಾಕಷ್ಟು ಮಂದಿ ಆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ಗೆ ಬರುವವರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹಾಲಿ ಶಾಸಕರೂ ಇದ್ದಾರೆ. ಅವರ ಹೆಸರನ್ನು ಈಗ ಬಹಿರಂಗಪಡಿಸುವುದಿಲ್ಲ. ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದರು.
ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಕ್ಷೇತ್ರದ ಮಾಜಿ ಶಾಸಕ ನಂಜುಂಡಸ್ವಾಮಿ, ವಿಜಯಪುರದ ನಾಗಠಾಣಾ ಕ್ಷೇತ್ರದ ಮಾಜಿ ಶಾಸಕ ಮನೋಹರ್ ಐನಾಪುರ, ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್ ಅವರು ಬಿಜೆಪಿ ತೊರೆದು ಇಂದು ಅಧಿಕೃತವಾಗಿ ಕಾಂಗ್ರೆಸ್ಗೆ ಸೇರಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವವರ ದೊಡ್ಡ ಪಟ್ಟಿಯೇ ಇದೆ. ಆದರೆ ಪ್ರಜಾಧ್ವನಿ ಯಾತ್ರೆಯಲ್ಲಿ ತೊಡಗಿಸಿಕೊಂಡ ಕಾರಣ ಈ ಪ್ರಕ್ರಿಯೆಗೆ ಸಮಯ ಸಾಕಾಗಿರಲಿಲ್ಲ. ಹೀಗಾಗಿ ಹಂತ ಹಂತವಾಗಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದವರು ತಿಳಿಸಿದರು.
ಬಿಜೆಪಿಯಲ್ಲಿ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಬರ, ನೆರೆ, ಕೋವಿಡ್ನಂತಹ ಕಷ್ಟ ಕಾಲವಿದ್ದ ಸಂದರ್ಭದಲ್ಲಿ ಇಲ್ಲಿಗೆ ಬಾರದ ರಾಷ್ಟ್ರ ನಾಯಕರು ಈಗ ಪ್ರತಿದಿನ ಎಂಬಂತೆ ಬಂದು ಹೋಗುತ್ತಿದ್ದಾರೆ. ಮನುಷ್ಯತ್ವ, ಮಾನವೀಯತೆ ಅವರಿಗಲ್ಲ. ಅವರಿಗೆ ಇಲ್ಲಿನವರ ಮತವಷ್ಟೇ ಬೇಕಾಗಿರುವುದು. ಹೀಗಾಗಿ ಮತಭೇಟೆಯಾಡಲು ಇಲ್ಲಿಗೆ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿ ಸರ್ಕಾರ ಹಣ ವಸೂಲಿಯಲ್ಲಿ ತೊಡಗಿದೆ. ಹಗರಣಗಳ ಸಂಖ್ಯೆ ಏರುತ್ತಲೇ ಇದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದ ಅಮಿತ್ ಶಾ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಕುಟುಕಿದರು.