ಬೆಂಗಳೂರು, ಮಾ 12 (DijiworldNews/HR): ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟರೂ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ ನರೇಂದ್ರ ಮೋದಿಯವರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯಲ್ಲಿ ಎಲ್ಲಿಯ ವರೆಗೆ ಲಂಚದ ಹಣದಲ್ಲಿ ಪಾಲು ಬಿಜೆಪಿ ಹೈಕಮಾಂಡ್ ಗೆ ಸಂದಾಯವಾಗುತ್ತೋ ಅಲ್ಲಿಯ ವರೆಗೆ ಭ್ರಷ್ಟರು, ದುಷ್ಟರು ಎಲ್ಲರೂ ಸುರಕ್ಷಿತ ಎಂದು ತಿಳಿದುಕೊಳ್ಳಬಹುದೇ? ಎಂದು ಪಶ್ನಿಸಿದ್ದಾರೆ.
ಹಿಂದೆ ಕರ್ನಾಟಕಕ್ಕೆ ಬಂದಿದ್ದ ನೀವು ಕರ್ನಾಟಕದ ಕಾಂಗ್ರೆಸ್ ದೆಹಲಿಯ ಹೈಕಮಾಂಡ್ಗೆ ಎಟಿಎಂ ಎಂದು ಗೇಲಿ ಮಾಡಿದ್ದೀರಿ. ನಿಮ್ಮ ಸಚಿವರು ಮತ್ತು ಶಾಸಕರು ಕೋಟಿ ಕೋಟಿ ಲೂಟಿ ಮಾಡಿ ನಿರ್ಭೀತಿಯಿಂದ ಇದ್ದಾರೆ ಎಂದರೆ ಕರ್ನಾಟಕ ರಾಜ್ಯ ನಿಮ್ಮ ಪಕ್ಷದ ಎಟಿಎಂ ಎಂದು ಅರ್ಥೈಸಬಹುದಾ ನರೇಂದ್ರ ಮೋದಿ ಜೀ? ನಾನು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂತೋಷ್ ಲಾಡ್ ಅವರ ಮೇಲೆ ಅಕ್ರಮ ಗಣಿಗಾರಿಕೆಯ ಆರೋಪ ಕೇಳಿ ಬಂದಿದ್ದಕ್ಕಾಗಿ ರಾಜೀನಾಮೆ ಕೊಡಿಸಿದ್ದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ನಮ್ಮ ಸರ್ಕಾರದ ವಿರುದ್ಧದ ಎಂಟು ಆರೋಪಗಳನ್ನು ಧೈರ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಿದ್ದೆ ಗೊತ್ತಾ ಎಂದರು.
ಇನ್ನು ಕಳೆದ ಬಾರಿಯ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದಿರಿ. ಈ ಬಾರಿ ನಿಮ್ಮ ಸರ್ಕಾರ 40% ಕಮಿಷನ್ ಕೇಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ನಿಮಗೆ ಪತ್ರ ಬರೆದರೂ ಯಾಕೆ ಉತ್ತರಿಸುತ್ತಿಲ್ಲ ನರೇಂದ್ರ ಮೋದಿ ಜೀ? ಸದನದಲ್ಲಿ * ಫಿಲ್ಮ್ ನೋಡಿದ್ದ ಕಾರಣಕ್ಕಾಗಿ ಮೂವರು ಬಿಜೆಪಿ ನಾಯಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅತ್ಯಾಚಾರದ ಆರೋಪ ಹೊತ್ತಿದ್ದ ಇನ್ನೊಬ್ಬ ಸಚಿವರೂ ರಾಜೀನಾಮೆ ನೀಡಬೇಕಾಯಿತು. ಅದು ವಾಜಪೇಯಿ ಕಾಲ, ಇದು ನರೇಂದ್ರ ಮೋದಿ ಕಾಲವೇ? ಎಂದು ಪ್ರಶ್ನಿಸಿದ್ದಾರೆ.