ಚಾಮರಾಜನಗರ, ಮಾ 12 (DijiworldNews/HR): ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಗ್ರಾಮ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.
ಮಧ್ಯಾಹ್ನ 1.30ರ ವೇಳೆಗೆ ಅವರ ಜಮೀನಿನಲ್ಲಿರುವ ಅವರ ತಂದೆ ತಾಯಿ ಸಮಾಧಿಯ ಬಳಿ ಇರುವ ಜಾಗಕ್ಕೆ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ತರಲಾಗಿದ್ದು, ಬಳಿಕ ನಂತರ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ಮೊಳಗಿಸಲಾಯಿತು.
ಇನ್ನು ಈ ಸಂದರ್ಭದಲ್ಲಿ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಜಿಲ್ಲಾಡಳಿತದ ಪರವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಪುಷ್ಪ ನಮನ ಸಲ್ಲಿಸಿದರು.