ಬೆಂಗಳೂರು, ಮಾ 23 (DaijiworldNews/DB): ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿ ದೇವನಹಳ್ಳಿ ಕಾಂಗ್ರೆಸ್ನ ಹಲವರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ.
ದೇವನಹಳ್ಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಹಲವು ಮುಖಂಡರು ಸಾಮೂಹಿಕ ರಾಜೀನಾಮೆಗೆ ನೀರ್ಧರಿಸಿದ್ದು, ಅದಕ್ಕಾಗಿ ಸಾಮೂಹಿಕ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ಕಾಂಗ್ರೆಸ್ನ ಉನ್ನತ ನಾಯಕರಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೆ.ಎಚ್. ಮುನಿಯಪ್ಪ ಅವರಿಗೆ ಟಿಕೆಟ್ ನೀಡಬಾರದು ಎಂಬುದು ಇವರ ಪ್ರಮುಖ ಒತ್ತಾಯವಾಗಿದೆ. ಮುನಿಯಪ್ಪಗೆ ಟಿಕೆಟ್ ನೀಡಿದ್ದಲ್ಲಿ ಆ ಕ್ಷೇತ್ರದಲ್ಲಿ ಪಕ್ಷಕ್ಕೆ ಸೋಲಾಗುತ್ತದೆ. ಸ್ಥಳೀಯರಿಗೇ ಈ ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.