ನವದೆಹಲಿ, ಮಾ 24 (DaijiworldNews/DB): ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ 14 ರಾಜಕೀಯ ಪಕ್ಷಗಳು ಶುಕ್ರವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಈ ಅರ್ಜಿಯು ಏಪ್ರಿಲ್ 5ರಂದು ವಿಚಾರಣೆಗೆ ಬರಲಿದೆ.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ರಾಷ್ಟ್ರೀಯ ಜನತಾ ದಳ, ತೃಣಮೂಲ ಕಾಂಗ್ರೆಸ್, ಡಿಎಂಕೆ ಸೇರಿ ಒಟ್ಟು 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿವೆ. ವಿಪಕ್ಷ ನಾಯಕರ ಬಂಧನಕ್ಕೂ ಮುನ್ನ ಹಾಗೂ ನಂತರ ತನಿಖಾ ಸಂಸ್ಥೆಗಳಾದ ಸಿಬಿಐ, ಜಾರಿ ನಿರ್ದೇಶನಾಲಯಕ್ಕೆ ಮಾರ್ಗಸೂತ್ರಕ್ಕೆ ರಾಜಕೀಯ ಪಕ್ಷಗಳು ಮನವಿ ಸಲ್ಲಿಸಿವೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
2019ರಲ್ಲಿ ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಭಾಷಣ ಮಾಡುವಾಗ ನರೇಂದ್ರ ಮೋದಿಯವರ ವಿರುದ್ದ ಮಾತನಾಡಿದ್ದರ ವಿರುದ್ದವಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಕಾಂಗ್ರೆಸ್ಸೇತರ ಹಲವು ಮುಖ್ಯಮಂತ್ರಿಗಳು ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.