ನವದೆಹಲಿ, ಮಾ 25 (DaijiworldNews/DB): ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ. ಆ ಮೂಲಕ ರಾಹುಲ್ ಅನರ್ಹತೆಗೆ ಪ್ರತ್ಯುತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿಯವರು ಅನರ್ಹಗೊಂಡ ಬೆನ್ನಲ್ಲೇ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಕೆಲವೇ ದಿನಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಬಹುದು. ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನೂ ಕೆಲಸ ಮಾಡಬೇಕು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದರು.
ಇನ್ನು ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್ನ ಎಲ್ಲಾ ಸಂಸದರು ಸಾಮೂಹಿಕ ರಾಜೀನಾಮೆ ನೀಡಬಹುದು ಎಂದೂ ಸಂಸದರೊಬ್ಬರು ಸಲಹೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಈ ವಿಚಾರದಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸುವ ಸಲುವಾಗಿ ಸಮಿತಿ ರಚಿಸುವ ಸಾಧ್ಯತೆಯೂ ಇದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಟೀರಿಂಗ್ ಕಮಿಟಿ, ಪಿಸಿಸಿ ಮುಖ್ಯಸ್ಥರು, ಸಿಎಲ್ ಪಿ ನಾಯಕರು ಮತ್ತು ಮುಂಭಾಗದ ಸಂಘಟನೆಗಳು, ಇಲಾಖೆಗಳು ಮತ್ತು ಕೋಶಗಳ ಮುಖ್ಯಸ್ಥರು ಭಾಗವಹಿಸಿದ್ದರು.
ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಕಾಂಗ್ರೆಸ್ಗೆ ಭಾರೀ ಹಿನ್ನಡೆಯಾಗಿದೆ. ದೇಶಾದ್ಯಂತ ಈ ಬೆಳವಣಿಗೆ ವಿರೋಧಿಸಿ ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಿದೆ.