ಹೈದರಾಬಾದ್, ಮಾ 26 (DaijiworldNews/DB): ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನಗರದ ಕುಶೈಗುಡಾ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ. ಮಕ್ಕಳಿಬ್ಬರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ ಖಿನ್ನತೆಯಿಂದ ದಂಪತಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದ್ದು, ಪೊಲೀಸರಿಗೆ ಶನಿವಾರ ಬೆಳಗ್ಗೆ ಮಾಹಿತಿ ಲಭಿಸಿದೆ. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾಡಿಗುಡ ಪ್ರದೇಶದಲ್ಲಿ ದಂಪತಿ ಮತ್ತು ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಕ್ಕಳಿಬ್ಬರೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹಲವಾರು ಚಿಕಿತ್ಸೆ ನೀಡಿದರೂ ಗುಣಮುಖರಾಗದ ಕಾರಣ ದಂಪತಿ ಖಿನ್ನತೆಗೆ ಜಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821