ಬೆಂಗಳೂರು, ಮಾ 30 (DaijiworldNews/HR): ಪಕ್ಷಾಂತರಗೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 'ಸಮ್ಮಿಶ್ರ ಸರ್ಕಾರ' ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಶಾಸಕರಿಗೆ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂಬ ಬೊಮ್ಮಾಯಿ ಆರೋಪಕ್ಕೆ ತಿರುಗೇಟು ನೀಡಿರುವ ಡಿಕೆಶಿ, ಮುಖ್ಯಮಂತ್ರಿ ಅವರಿಗೆ ಮಾತನಾಡುವ ನೈತಿಕತೆ ಇಲ್ಲ. ಗಂಜಲ ಮತ್ತು ಸಗಣಿ ಸಹ ಅವರ ಸರ್ಕಾರದ ದುಷ್ಕೃತ್ಯಗಳನ್ನು ಅಳಿಸಲು ಸಾಧ್ಯವಿಲ್ಲ ಎಂದರು.
ಇನ್ನು ಆಪರೇಷನ್ ಕಮಲದಡಿ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದ ಶಾಸಕರನ್ನು ಕಿತ್ತುಕೊಂಡು ಇಷ್ಟು ದಿನ ಅಧಿಕಾರ ಅನುಭವಿಸಿದ್ದೀರಿ. ನಿಮಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.
ಜನರು ನಿಮಗೆ 112 ಸ್ಥಾನಗಳನ್ನು ನೀಡದಿದ್ದರೂ ಇಂದಿನವರೆಗೂ ಪಕ್ಷಾಂತರಗೊಂಡ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರವನ್ನು ನಡೆಸಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.