ಬೆಳಗಾವಿ, ಮಾ 31 (DaijiworldNews/DB): ವರುಣಾದಲ್ಲಿ ಸೋಲುವ ಭೀತಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೇರೊಂದು ಕ್ಷೇತ್ರವನ್ನೂ ಹುಡುಕುತ್ತಿದ್ದಾರೆ. ಅವರು ಎಲ್ಲಾ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ವರುಣಾದಲ್ಲಿ ಸೋಲುವ ಭಯದಿಂದ ಸಿದ್ದರಾಮಯ್ಯ ಬೇರೆ ಕ್ಷೇತ್ರ ಹುಡುಕುತ್ತಿದ್ದಾರೆ. ಅಪ್ಪನಿಗೆ ಮಗ ತ್ಯಾಗ ಮಾಡಿದಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರು ಎಲ್ಲಾ 224 ಕ್ಷೇತ್ರಗಳಲ್ಲೂ ಕಣಕ್ಕಿಳಿಯಲಿ ಎಂದರು.
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 6 ಅಥವಾ 7ರಂದು ಬಿಡುಗಡೆ ಮಾಡುತ್ತೇವೆ. ಪ್ರತಿ ಕ್ಷೇತ್ರದಿಂದಲೂ ಇಬ್ಬರು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಹೈಕಮಾಂಡ್ಗೆ ರವಾನಿಸಲಾಗುತ್ತದೆ. ಅಲ್ಲಿ ಓರ್ವ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.