ದಾವಣಗೆರೆ, ಮಾ 31 (DaijiworldNews/SM): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುತ್ತದೆ ಎಂಬ ವಿಶ್ವಾಸ ಇದೆ. ಜನಪರವಾದ ಕೆಲಸ ಮಾಡಿದವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿರಿಯರ ಅಪೇಕ್ಷೆ ಮೇರೆಗೆ ಕಾರ್ಯಕರ್ತರ ಅಭಿಪ್ರಾಯ ಕೇಳಿ ಟಿಕೆಟ್ ಹಂಚಿಕೆ ಮಾಡಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ. ಬೂತ್ ಮೇಲ್ಪಟ್ಟ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಪ್ರಾಯ ತಿಳಿಸಲು ಅವಕಾಶ ನೀಡಿದ್ದೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಇನ್ನೊಂದು ಶಕ್ತಿಯನ್ನು ರಾಜ್ಯದ ಜನತೆ ನೀಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲೆ ಪ್ರವಾಸ ಮಾಡಿದರೂ ಡಬಲ್ ಎಂಜಿನ್ ಸರ್ಕಾರದ ಸಾಧನೆ ಬಗ್ಗೆ ಮಾತನಾಡುತ್ತಾರೆ. ದೇಶದ ರಕ್ಷಣೆ, ವಿದೇಶಗಳಲ್ಲಿ ಗೌರವ ಸಿಗಲು ಎರಡೂ ಕಡೆ ಬಿಜೆಪಿ ಸರ್ಕಾರ ಇರಬೇಕು. ಇಲ್ಲಿ ಮಾಡಿರುವ ಕೆಲಸಗಳೇ ನಮಗೆ ಶ್ರೀರಕ್ಷೆ ಎಂದು ತಿಳಿಸಿದರು.