ಬೆಂಗಳೂರು, ಮೇ 13 (DaijiworldNews/MS): ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಆಡಳಿತಾರೂಢ ಬಿಜೆಪಿ ಹೀನಾಯ ಸೋಲಿನ ಸುಳಿಗೆ ಸಿಲುಕಿದ್ದು, ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರುವ ತಯಾರಿ ಪ್ರಾರಂಭಿಸಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕೂಡ ಹೆಚ್ಚಾಗಲಿದೆ.
ಕಾಂಗ್ರೆಸ್ ಪಕ್ಷದಲ್ಲಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ವರುಣಾ ಕ್ಷೇತ್ರದಲ್ಲಿ ಗೆದ್ದ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಫರ್ಧಿಯಾಗಿದ್ದು ನನ್ನ ಚುನಾವಣೆ ರಾಜಕೀಯ ಇದೇ ಕೊನೆ ಎಂಬ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಿದ್ದರಾಮಯ್ಯ ಬದಲಿಗೆ ತಮ್ಮನ್ನೆ ಮುಖ್ಯಮಂತ್ರಿ ಮಾಡುವಂತೆ ಪಕ್ಷದ ಹೈ ಕಮಾಂಡ್ ಮೇಲೆ ಒತ್ತಡವನ್ನು ಹಾಕುತ್ತಿದ್ದಾರೆ.
ಇನ್ನೊಂದೆಡೆ ನಾಳೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನೂತನ ಶಾಸಕರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ವೀಕ್ಷಕರ ಸಮ್ಮುಖದಲ್ಲಿ ಸಭೆ ನಡೆಸಲಿದ್ದು ಸಭೆಯಲ್ಲಿ ಶಾಸಕರ ಅಭಿಪ್ರಾಯದ ಆಧಾರ ಮೇಲೆರೆ ಶಾಸಕಾಂಗದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ