ಬೆಂಗಳೂರು, ಮೇ 23 (DaijiworldNews/SM): ಮಂಗಳವಾರ ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಮುಖ ಸಭೆ ನಡೆಸಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಕದಡುವ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನೈತಿಕ ಪೊಲೀಸ್ಗಿರಿಯನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗುವ ತಪ್ಪು ಮಾಹಿತಿ ಹರಡುವ ಸಾಮಾಜಿಕ ಜಾಲತಾಣಗಳ ಪೋಸ್ಟ್ಗಳ ಮೇಲೆ ನಿಗಾ ಇಡುವಂತೆಯೂ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯ ಪ್ರಕಾರ, ಬೆಂಗಳೂರಿನ ಟ್ರಾಫಿಕ್ ಅವ್ಯವಸ್ಥೆಯ ಬಗ್ಗೆ ಚರ್ಚಿಸಲು ಮತ್ತು ಅದಕ್ಕೆ ಪರಿಹಾರವನ್ನು ಕಂಡುಹಿಡಿಯಲು ಪ್ರತ್ಯೇಕ ಸಭೆ ನಡೆಸಲಾಗುತ್ತದೆ.
ಅಧಿಕಾರಿಗಳ ಜೊತೆಗೆ ಸಭೆ ಬಳಿಕ ಕರ್ನಾಟಕ ಸಿಎಂಒದ ಟ್ವೀಟ್ನಲ್ಲಿ, "ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು" ಎಂದಿದೆ.