ಬೆಂಗಳೂರು, ಮೇ 24 (DaijiworldNews/HR): ಸಚಿವ ಎಂಬಿ ಪಾಟೀಲ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಪರಸ್ಪರ ಏರುಧ್ವನಿಯಲ್ಲಿ ಮಾತನಾಡಿದ ಪ್ರಸಂಗ ನಡೆದಿದ್ದು, ಸಚಿವ ಸಂಪುಟ ಬಿಕ್ಕಟ್ಟಿನ ನಡುವೆಯೇ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜನೆಯಾಗಿದ್ದು, ಈ ಸಭೆಗೆ ಆಗಮಿಸುತ್ತಿದ್ದಾಗ ಸುರೇಶ್ ಮತ್ತು ಎಂಬಿ ಪಾಟೀಲ್ ಎದುರು ಬದುರು ಆಗಿದ್ದು, ಈ ವೇಳೆ ಸುರೇಶ್ ಅವರು ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಮಾತನಾಡಲು ನೀವು ಯಾರು ಎಂದು ಪಾಟೀಲ್ ಅವರಿಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಎಂಬಿಪಿ, ನಾನೇನು ಹೇಳಿಲ್ಲ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದನ್ನು ಹೇಳಿದ್ದೇನೆ ಎಂದು ಉತ್ತರಿಸಿದ್ದಾರೆ.
ಇನ್ನು ಸಭೆಯಲ್ಲಿ ಅಧಿಕಾರ ಹಂಚಿಕೆ ವಿಚಾರ, ಸಚಿವ ಸ್ಥಾನದ ವಿಚಾರ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡದಿರಿ. ಈ ರೀತಿಯ ಹೇಳಿಕೆಗಳು ಸರ್ಕಾರ ಹಾಗೂ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೇವೆ. ಆದರೆ, ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು ಎಂದು ಡಿಕೆ ಶಿವಕುಮಾರ್ ಶಾಸಕರಿಗೆ ಟಾಸ್ಕ್ ಕೊಟ್ಟಿದ್ದಾರೆಂದು ವರದಿಗಳು ತಿಳಿಸಿವೆ.