ಬೆಂಗಳೂರು, ಜೂ 21 (DaijiworldNews/MS): ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕಾಂಗ್ರೆಸ್ ಈಗ ಕೇಂದ್ರ ಸರಕಾರ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯಾರೋ ಚುನಾವಣಾ ತಂತ್ರಗಾರರ ಮಾತು ಕೇಳಿಕೊಂಡು ಗ್ಯಾರಂಟಿ ಘೋಷಣೆ ಮಾಡಿದಾಗ, ಅಕ್ಕಿ ಗ್ಯಾರಂಟಿ ನೀಡುವ ಬಗ್ಗೆ ಇವರೇನು ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿದ್ದರೇ? ಅಂದೇ ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಮೊದಲು ಸುಳ್ಳು ಭರವಸೆ ನೀಡಿ, ಗ್ಯಾರಂಟಿ ಕೊಟ್ಟು ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಸಚಿವರ ಹೆಂಡ್ತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದು ಹೇಳಿ ಎಲ್ಲರೂ ಅರ್ಜಿ ಹಾಕಿಕೊಳ್ಳಬಹುದು ಎಂದು ಅಂದು ಹೇಳಿದ ನೀವು ಇಂದು ಹೊಸ ವರಸೆ ಯಾಕೆ ಪ್ರಾರಂಭಿಸಿದ್ದೀರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.