ಬೆಳಗಾವಿ, ಜೂ 25 (DaijiworldNews/SM): ವಿಧಾನಸಭೆ ಹಾಗೂ ಲೋಕಸಭೆಯೇ ಬೇರೆಯಾಗಿದೆ. ವಿಧಾನಸಭೆಯಲ್ಲಿ ಬಿಜೆಪಿಗೆ ಸೋಲಾಗಿರಬಹುದು. ಆದರೆ ಲೋಕಸಭಾ ಚುನಾವಣೆಯೇ ಬೇರೆ. ಹೀಗಾಗಿ ಎದುರಾದ ಸೋಲು ಮರೆತ ನಾಯಕರು, ಕಾರ್ಯಕರ್ತರೆಲ್ಲರೂ ಸೇರಿ 2024ರಲ್ಲಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಗೆಲ್ಲಿಸಲು ಶ್ರಮಿಸೋಣ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಬೇಕಿದೆ. ಮತ್ತೆ ಮೋದಿಯವರನ್ನು ಪ್ರಧಾನಿ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು. ನರೇಂದ್ರ ಮೋದಿ ಬಂದ ಮೇಲೆ ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ.
ಬಿಜೆಪಿ ಅಧಿಕಾರದಲ್ಲಿ ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣಗೊಂಡಿವೆ. ಪ್ರತಿ ಮನೆಗೆ ನೀರು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದರು. 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ. ರೈತರು, ವಿದ್ಯಾರ್ಥಿಗಳಿಗೆ ಹಲವು ಕಾರ್ಯ ಮಾಡಿದ್ದೇವೆ. ದೇಶವು ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಸುರಕ್ಷಿತವಾಗಿದೆ. ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ಸಾಧನೆ ಹೇಳಿಕೊಂಡರು.
ನರೇಂದ್ರ ಮೋದಿಯನ್ನು ಹೇಗೆ ಸೋಲಿಸಬೇಕು. ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಆಗಿದೆ. ಪ್ರಧಾನಿ ಮೋದಿ ಸೋಲ್ಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು. ಮೋದಿ ಎದುರಿಸಲು ವಿಪಕ್ಷದಲ್ಲಿ ಒಬ್ಬ ನಾಯಕ ಇಲ್ಲ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನಗಳನ್ನು ಮತ್ತೆ ಗೆಲ್ಲುತ್ತೇವೆ. ಕಾರಣ ವಿರೋಧ ಪಕ್ಷದಲ್ಲಿ ಒಬ್ಬರೂ ಸಹ ಪ್ರಧಾನಿ ವಿರುದ್ಧ ನಿಂತು ಎದುರಿಸುವ ನಾಯಕರಿಲ್ಲ ಎಂದು ಬೊಮ್ಮಾಯಿ ಲೇವಡಿ ಮಾಡಿದರು.