ಕೋಲ್ಕತ್ತಾ, ಜು 01 (DaijiworldNews/HR): ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ.
ಟಿಎಂಸಿ ಪಕ್ಷದ ಯುವ ಅಧ್ಯಕ್ಷೆ ಸಯೋನಿ ಘೋಷ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ಸತತ 12 ಗಂಟೆಗಳ ಕಾಲ ವಿಚಾರಣೆ ನಡೆಸಿರುವ ಕುರಿತು ಪ್ರತಿಕ್ರಿಯಿಸಿರುವ ಸಿನ್ಹಾ, 2024ರಲ್ಲಿ ಅಧಿಕಾರದಿಂದ ಕೆಳಗಿಳಿಯುವ ಆತಂಕದಿಂದ ಬಿಜೆಪಿ ಪ್ರತಿಪಕ್ಷಗಳ ವಿರುದ್ಧ ಸೇಡು ತೀರಿಸಿಕೊಳ್ಳುವ ಹತಾಶ ಪ್ರಯತ್ನ ನಡೆಸುತ್ತಿದೆ ಎಂದು ಅರೋಪಿಸಿದ್ದಾರೆ.
ಇನ್ನು ನಿರುದ್ಯೋಗ ಮತ್ತು ಹಣದುಬ್ಬರದಂತಹ ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಚುನಾವಣೆ ಸಮೀಪಿಸುತ್ತಿರುವ ಕಾರಣ ಬಿಜೆಪಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ.