ಕೊಪ್ಪಳ, ಜು 20 (DaijiworldNews/MS): ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ಕನಕಗಿರಿ ತಹಶೀಲ್ದಾರ್ ಸಂಜಯ್ ಕಾಂಬ್ಳೆ ಆದೇಶ ಹೊರಡಿಸಿದ್ದಾರೆ.
ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಳೆದ ವರ್ಷ ಕ್ಲುಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆಯಾಗಿ ಇಬ್ಬರು ಮೃತಪಟ್ಟಿದ್ದರು. ಮೊಹರಂ ಹಬ್ಬದ ಮೂರನೇ ದಿನದ ಕಾರ್ಯಕ್ರಮದಲ್ಲಿಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿತ್ತು. ಹೊಡೆದಾಟದಲ್ಲಿ ಯಂಕಪ್ಪ ತಳವಾರ (60), ಪಾಷಾವಲಿ (27) ಎಂಬುವವರು ಮೃತಪಟ್ಟಿದ್ದು 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಿಸಿ 84 ಜನರನ್ನು ಬಂಧಿಸಲಾಗಿತ್ತು.