ಬೆಂಗಳೂರು,ಜು 22(DaijiworldNews/AK):545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ.
ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ. ಈ ತನಿಖಾ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪ್ರಕರಣದ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.
ಪಿಎಸ್ಐ 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಜನವರಿ 21 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು.
ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳನ್ನು ಒಳಗೊಂಡ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ನಂತರ ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆ ಬರೆದಿರುವು ದೃಢಪಟ್ಟಿರುವ ಹಿನ್ನೆಲೆ 1977ರ ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳ ಪ್ರಕಾರ ಪೊಲೀಸ್ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು.