ಬೆಂಗಳೂರು,ಜು 27 (DaijiworldNews/AK): ನಗರದ ಡಿಜೆ ಹಳ್ಳಿ-ಕೆಜೆ ಹಳ್ಳಿ ಸೇರಿದಂತೆ ರಾಜ್ಯದ ವಿವಿಧ ಪ್ರತಿಭಟನೆ ಹಾಗೂ ಗಲಭೆಯಲ್ಲಿ ಬಂಧಿತರಾಗಿರುವ ಅಮಾಯಕ ಯುವಕ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ಪತ್ರ ಬರೆದಿದ್ದು, ಇದಕ್ಕೆ ಗೃಹ ಸಚಿವ ಪರಮೇಶ್ವರ್ ಸ್ಪಂದಿಸಿದ್ದಾರೆ.
ಕರ್ನಾಟಕದ ವಿವಿಧೆಡೆ ಪ್ರತಿಭಟನೆ, ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕೇಸ್ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ , ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಗೆ ಪತ್ರ ಬರೆದಿದ್ದಾರೆ.
ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಮೈಸೂರಿನ ಎನ್.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ತನ್ವೀರ್ ಸೇಠ್ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪತ್ರ ಬರೆದಿದ್ದಾರೆ.