ದೆಹಲಿ, ಜು 29 (DaijiworldNews/AK): ಮೇ 4 ರಂದು ಮಣಿಪುರದಲ್ಲಿ ಜನರ ಗುಂಪೊಂದು ಮೂವರು ಕುಕಿ ಮಹಿಳೆಯರನ್ನು, ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಹಿಸಿಕೊಂಡಿದೆ.
ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ. ವಿಚಾರಣೆಯು ಕಾಲಮಿತಿಯಾಗಿರಬೇಕು ಮತ್ತು ಮಣಿಪುರದ ಹೊರಗೆ ನಡೆಯಬೇಕು ಎಂದು ಕೇಂದ್ರವು ಗುರುವಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.
ಕೇಂದ್ರ ಸರ್ಕಾರವು ಈಗಿನ ಅಪರಾಧಗಳನ್ನು ತುಂಬಾ ಘೋರವೆಂದು ಪರಿಗಣಿಸುತ್ತದೆ. ಅದನ್ನು ಗಂಭೀರವಾಗಿಯೇ ತೆಗೆದುಕೊಳ್ಳಬೇಕು. ಆದರೆ ನ್ಯಾಯವನ್ನು ನೋಡಬೇಕು. ಅದು ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ರಾಷ್ಟ್ರದಾದ್ಯಂತ ಪ್ರತಿಬಂಧಕ ಪರಿಣಾಮವನ್ನು ಬೀರುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಸಲ್ಲಿಸಿರುವ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಮಣಿಪುರ ಪೊಲೀಸರು ಇದುವರೆಗೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ವೈರಲ್ ವೀಡಿಯೊದಲ್ಲಿ ಕಂಡುಬರುವ ಕೆಲವರು ಸೇರಿದಂತೆ ಇತರರ ಹುಡುಕಾಟ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.