ಬೆಂಗಳೂರು, ಏ 10(): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಎರಡು ಕಡೆ ಬಹಿರಂಗ ಪ್ರಚಾರ ಮಾಡಿರುವುದು ವಿರೋಧಿಗಳ ಮನದಲ್ಲಿ ನಡುಕ ಹುಟ್ಟಿಸಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅವರ ಮಾತನಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ನಿನ್ನೆ ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಪಕ್ಷದ ಪರ ಪ್ರಚಾರ ನಡೆಸಿರುವುದು ಕಾರ್ಯಕರ್ತರಲ್ಲಿ ಹೊಸ ಹುರುಪನ್ನು ಮೂಡಿಸಿದೆ. 28 ಕ್ಷೇತ್ರಗಳಲ್ಲೂ ಮೋದಿ ಅವರ ಸಂದೇಶ ಸಂಚಲನ ಸೃಷ್ಟಿಸಿದೆ ಎಂದರು.
‘ಮೋದಿ ವಿರುದ್ಧ ಭ್ರಷ್ಟಾಚಾರ ಆರೋಪಗಳೇ ಇಲ್ಲ’ ಐದು ವರ್ಷಗಳ ಅವಧಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನೀಡಿದ ಕೀರ್ತಿ ನರೇಂದ್ರ ಮೋದಿ ಹಾಗೂ ನಮ್ಮ ಬಿಜೆಪಿ ಪಕ್ಷಕ್ಕೆ ಸಲ್ಲುತ್ತದೆ ಎಂದರು. ಹಿಂದಿನ ಯುಪಿಎ ಅವಧಿಯಲ್ಲಿ ಆಕಾಶದಿಂದ ನೆಲದವರೆಗೂ ಹಗರಣಗಳ ಸರಮಾಲೆಯೇ ಸೃಷ್ಟಿಯಾಗಿತ್ತು. ಇದರಿಂದ ವಿಶ್ವದಲ್ಲಿ ಭಾರತದ ಮುಕುಟಕ್ಕೆ ಕಳಂಕ ಬಂದಿತ್ತು ಎಂದು ಅಸಮಾಧಾನ ಹೊರ ಹಾಕಿದರು.