ಬೆಂಗಳೂರು, ಸೆ 12 (DaijiworldNews/AK): ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು,ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯ ಇರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು ಎಂದು ಸಿಎಂ ಖಡಕ್ ಸೂಚನೆ ನೀಡಿದ್ದಾರೆ.
ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ.ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು ಎಂದರು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು.
ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ.ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧ ಪ್ರಿಸ್ಕ್ರಿಪ್ಷನ್ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎನ್ನುವ ಸೂಚನೆ ನೀಡಿದರು.