ಕಲಬುರಗಿ,ಸೆ 17 (DaijiworldNews/AK): ನರೇಗಾ ಕಾರ್ಮಿಕ ಮಹಿಳೆಯರ ಸಬಲೀಕರಣಕ್ಕಾಗಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಸರಕಾರದ ವಿಶಿಷ್ಟ ಯೋಜನೆಯಾದ ''ಕೂಸಿನ ಮನೆ' ಯೋಜನೆಯ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಡುಗಡೆಗೊಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ, ನರೇಗಾ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳ ಪಾಲನೆ,ಪೋಷಣೆಗೆ ರಾಜ್ಯಾದ್ಯಂತ 4,000 ಗ್ರಾಮ ಪಂಚಾಯತ್ ಗಳಲ್ಲಿ ಕೂಸಿನ ಮನೆ, ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸಿದೆ ಎಂದು ಹೇಳಿದ್ದಾರೆ.
ಮಕ್ಕಳ ಪಾಲನೆ, ಪೋಷಣೆ ಕೆಲಸದ ಮುಕ್ಕಾಲು ಭಾಗವನ್ನು ಮಹಿಳೆಯರೇ ಮಾಡುತ್ತಿದ್ದಾರೆ. ದುಡಿಮೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಪ್ರಮಾಣವನ್ನು ಹೆಚ್ಚಿಸುವುದು ಅಗತ್ಯವಾಗಿದೆ.
ಈ ಹಿನ್ನಲೆಯಲ್ಲಿ 2023-24ರ ಜುಲೈ ಅಯವ್ಯಯ ಭಾಷಣದಲ್ಲಿನ ಘೋಷಣೆಯಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಅವರ ಮೂರು ವರ್ಷದ ಒಳಗಿನ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯದ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದವರು ತಿಳಿಸಿದರು.
ಈ ಕೂಸಿನ ಮನೆ ಕೇಂದ್ರಗಳು ದಿನದ 16 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಗ್ರಾಮ ಪಂಚಾಯಿತಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರು ಕೆಲಸ ಮಾಡುವ ಅವಧಿಗೆ ಅನುಕೂಲವಾಗುವಂತೆ ಸಮಯವನ್ನು ನಿರ್ಧರಿಸುವರು.
4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಮಕ್ಕಳ ಆರೈಕೆದಾರರನ್ನು ಆಯ್ಕೆ ಮಾಡಿ ಅವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುವುದು.ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆದಾರರಾಗಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುವುದು.